‘ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿ’

‘ಮಲ್ಲಿಕಾರ್ಜುನ  ಖರ್ಗೆ  ರಾಜ್ಯದ  ಮುಖ್ಯಮಂತ್ರಿಯಾಗಲಿ’

ಸಿದ್ದರಾಮಯ್ಯ ಹಂಬಲಕ್ಕೆ  ಹೊಸ ಹಂಪ್ಸ್ ಸೃಷ್ಟಿಸಿದ ಡಿ.ಕೆ.ಶಿವಕುಮಾರ್

 

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಹೀಗೆ ಹೇಳುವ ಮೂಲಕ ಸಿದ್ದರಾಮಯ್ಯನವರ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಹಂಬಲಕ್ಕೆ ಮತ್ತೊಂದು ನೈತಿಕ ಅಡ್ಡಿಯನ್ನು ಸೃಷ್ಟಿಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತದೆಯೋ ನಾನು ಅದಕ್ಕೆ ಬದ್ಧವಾಗಿರುತ್ತೇನೆ. ಅವರು ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡಿದ್ದಾರೆ. ಮಧ್ಯರಾತ್ರಿ ತಮ್ಮ ಶಾಸಕಾಂಗ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ. ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಬೇಕು ಎಂದು ಎಲ್ಲರೂ ಕಾಯುತ್ತಿದ್ದಾರೆ. ಹೀಗಾಗಿ ಎಲ್ಲ ಅಧಿಕಾರಿ ವರ್ಗದವರು, ಸರ್ಕಾರಿ ನೌಕರರಿಗೆ ನಮ್ಮ ಸಾಮಾಜಿಕ ಬದ್ಧತೆ ಗಮನದಲ್ಲಿಟ್ಟುಕೊಂಡು ನಮಗೆ ಬೆಂಬಲ ನೀಡಬೇಕು ಎಂದರು.

ಪಕ್ಷದಲ್ಲಿ ಟಿಕೆಟ್ ಹಂಚಿಕೆ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ನಾವು ಎಲ್ಲರ ಜತೆ ಮಾತನಾಡುತ್ತಿದ್ದೇವೆ. ರಾಜಕಾರಣದಲ್ಲಿ ಆಸೆ ಸಹಜ. ಈ ಸಂದರ್ಭದಲ್ಲಿ ನಾವು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ. ರಾಜಕೀಯ ಎಂದರೆ ಅಧಿಕಾರ ಹಂಚಿ ಸಹಕಾರ ನೀಡುವುದಾಗಿದೆ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರವನ್ನು ಹಂಚಲಾಗುವುದು. ಈ ಕಾರಣಕ್ಕಾಗಿ ಎಲ್ಲರೂ ಸಮಾಧಾನವಾಗಿ ಇರಬೇಕು ಎಂದು ಕೇಳುತ್ತಿದ್ದೇವೆ ಎಂದರು.

ನಂದಿನಿ ನಮ್ಮ ಸಂಸ್ಥೆ. ರಾಜ್ಯದಲ್ಲಿ 78 ಲಕ್ಷ ರೈತರು ಹಾಲು ಉತ್ಪಾದನೆ ಅವಲಂಬಿಸಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ನೀರಿಗೂ ಹಾಲಿಗೂ ಒಂದೇ ಬೆಲೆ ಆಗಿದೆ. ರೈತರಿಗೆ ಕೇವಲ 28 ರೂ ನೀಡಲಾಗುತ್ತಿದೆ. ರೈತರಿಗೆ ಸರಿಯಾದ ಬೆಲೆ ಸಿಗಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ರಾಮನಗರದಲ್ಲಿ 5 ರೂ. ಪ್ರೋತ್ಸಾಹ ಧನ ನೀಡಿತ್ತು.ಸರಕಾರ ನಂದಿನಿ ವಿಚಾರವಾಗಿಯೂ ಹೋರಾಟ ಮಾಡುತ್ತಿಲ್ಲ ಹಾಗೂ ಮಹಾರಾಷ್ಟ್ರ ರಾಜ್ಯದ 864 ಹಳ್ಳಿಗೆ ಆರೋಗ್ಯ ವಿಮೆ ಯೋಜನೆಗೆ ಹಣ ನೀಡುತ್ತಿರುವುದರ ಬಗ್ಗೆಯೂ ಮಾತನಾಡುತ್ತಿಲ್ಲ. ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಿತ್ತು. ಆದರೆ ಈ ವಿಚಾರವಾಗಿ ಚಲನಚಿತ್ರ ನಟರಾಗಲಿ, ಸಾಹಿತಿಗಳಾಗಲಿ, ಹೋರಾಟಗಾರರಾಗಲಿ ಯಾರೂ ಮಾತನಾಡುತ್ತಿಲ್ಲ ಎಂದು ತಿಳಿಸಿದರು.