``ಹಿರಿಯರನ್ನು ಗೌರವಿಸದಿರುವುದು ಆತಂಕಕಾರಿ ಬೆಳವಣಿಗೆ’’ ಹಿರಿಯ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಕಳವಳ
``ಹಿರಿಯರನ್ನು ಗೌರವಿಸದಿರುವುದು ಆತಂಕಕಾರಿ ಬೆಳವಣಿಗೆ’’
ಹಿರಿಯ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಕಳವಳ
ತುಮಕೂರು: ಪರಂಪರೆಯುಳ್ಳ ನಾಡಿನಲ್ಲಿ ಹಿರಿಯರನ್ನು ಗೌರವಿಸದೇ ಇರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹಿರಿಯ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೆಂದ್ರ ಶೆಟ್ಟಿಗಾರ್ ಕಳವಳ ವ್ಯಕ್ತಪಡಿಸಿದರು.
ಶುಕ್ರವಾರ ನಗರದಲ್ಲಿ ನಡೆದ ವಿಶ್ವ ಹಿರಿಯನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯರು ತಮ್ಮ ಹಕ್ಕಗಳನ್ನು ಪಡೆದುಕೊಳ್ಳಬೇಕೆಂಬ ಕಾನೂನುಗಳನ್ನು ಸಂವಿಧಾನದಲ್ಲಿ ರಚನೆ ಮಾಡಲಾಗಿದ್ದು, ಆ ಕಾನೂನುಗಳನ್ನು ಕಾರ್ಯಗತಗೊಳಿಸಬೇಕಾದ ಅವಶ್ಯಕತೆಯಿದೆ. ಪ್ರತಿಯೊಬ್ಬ ಹಿರಿಯ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವುದರೊಂದಿಗೆ ರಕ್ಷಣೆ ಮಾಡಬೇಕೆಂದು ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಸರ್ವೋಚ್ಛ ನ್ಯಾಯಾಲಯದ ಧ್ಯೇಯೋದ್ದೇಶದಂತೆ ಹಿರಿಯ ನಾಗರಿಕರಿಗೆ ಯಾವುದೇ ಸಂದರ್ಭದಲ್ಲಿ ತೊಡಕು, ತೊಂದರೆಗಳು ಬಂದಲ್ಲಿ ನೇರವಾಗಿ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಬಹುದಾಗಿದೆ ಎಂದರು.
ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಹಿರಿಯರು ಅನೇಕ ನೋವು, ದುಃಖ ಅನುಭವಿಸುತ್ತಿದ್ದು ಹಿರಿಯರ ನೋವನ್ನು ಕೇಳುವವರಿಲ್ಲದಂತಾಗಿದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಹಿರಿಯ ನಾಗರಿಕರ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿಯಲ್ಲಿ ಬದುಕುವ ವಾತಾವರಣ ನಿರ್ಮಾಣ ಮಾಡುವ ಸಲುವಾಗಿ ಆರೋಗ್ಯ ಸೇವೆ, ವೃದ್ಧಾಪ್ಯ ವೇತನ ನೀಡಲಾಗುತ್ತಿದೆ. ಹಿರಿಯ ನಾಗರಿಕರ ನೆರವಿಗೆ ಆರಂಭಿಸಲಾಗಿರುವ ಸಹಾಯವಾಣಿಯ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ಅಜಯ್ ಮಾತನಾಡಿ, ದೇಶದಲ್ಲಿ ವಯಸ್ಸು ಮತ್ತು ಶಕ್ತಿ ಕಡಿಮೆ ಇರುವವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ. ಹಿರಿಯರ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಡಿಜಿಟಲ್ ಈಕ್ವಿಟಿ ಡಿವೈಸ್ ವ್ಯವಸ್ಥೆ ಅಡಿಯಲ್ಲಿ ತರಲಾಗಿದ್ದು, ಅವಶ್ಯಕತೆ ಇರುವ ಹಿರಿಯ ನಾಗರಿಕರು ಮಾಹಿತಿ, ಸೌಲಭ್ಯಕ್ಕಾಗಿ ಸಹಾಯವಾಣಿ ೧೪೫೬೭ ಉಚಿತ ಕರೆ ಮಾಡಿ ಸಮಸ್ಯೆಗಳನ್ನು ತಿಳಿಸಬಹುದು ಎಂದರು.
ಹಿರಿಯ ನಾಗರಿಕ ಸಂರಕ್ಷಣಾ ಸಂಸ್ಥೆ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಮಾತನಾಡಿ, ಹಿರಿಯರಿಗೆ ಗೌರವ ನೀಡುವ, ಹಿತಾಸಕ್ತಿ ಕಾಪಾಡುವ ಗಣ್ಯರು ಕಾರ್ಯಕ್ರಮಕ್ಕೆ ಹಾಜರಾಗದಿರುವುದು ನೋವಿನ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಮಾತನಾಡಿ, ಹಿರಿಯರು ಇಲಾಖೆಯಡಿ ರೂಪಿಸಿದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಯುವಕರು ನಾಚಿಸುವಂತಹ ಕೆಲಸ ಮಾಡಿದ್ದಾರೆ. ಹಿರಿಯರ ಕ್ರೀಡಾಸಕ್ತಿ ಗಮನಿಸಿದರೆ ವಯಸ್ಸು ದೇಹಕ್ಕಾಗಿದೆ ವಿನಃ ಅವರ ನೈಪುಣ್ಯತೆಗಲ್ಲ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ನಡೆದ ಕ್ರೀಡೆ, ಸಾಂಸ್ಕೃತಿಕ, ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಹಿರಿಯರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
ದಿನಾಚರಣೆಗೆ ಆಗಮಿಸಿದ್ದ ಹಿರಿಯ ನಾಗರಿಕರಿಗೆ ರಕ್ತದೊತ್ತಡ, ಮಧುಮೇಹ, ಹೃದಯ ಸಂಬAಧಿ, ಕ್ಯಾನ್ಸರ್ ಸೇರಿದಂತೆ ವಯೋ ಸಹಜ ಖಾಯಿಲೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ, ಅಂಗವಿಕಲ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ರಮೇಶ್ ಸೇರಿದಂತೆ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಿರಿಯ ನಾಗರಿಕರು ಭಾಗವಹಿಸಿದ್ದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.