ಇಂದು ನಗರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಇಂದು ನಗರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ತುಮಕೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ನಗರದಲ್ಲಿಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಲೋಕೋಪಯೋಗಿ ಹಾಗೂ ಆರೋಗ್ಯ ಇಲಾಖೆಗೆ ಸಂಬAಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇಂದು ಬೆಳಗ್ಗೆ ೯ ಗಂಟೆಗೆ ನಗರದ ಪ್ರವಾಸಿ ಮಂದಿರ ಆವರಣದಲ್ಲಿ ಹೊಸ ಪ್ರವಾಸಿ ಮಂದಿರದ ಮೊದಲ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಂತರ ೯-೩೦ ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಅಪೌಷ್ಠಿಕ ಮಕ್ಕಳ ಪುನಶ್ಚೇತನ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನರಚನೆ ಮತ್ತು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್, ಸಂಸದ ಜಿ.ಎಸ್. ಬಸವರಾಜು ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಬಿಗಿ ಭದ್ರತೆ: ಮುಖ್ಯಮಂತ್ರಿಗಳ ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸರ್ವರೀತಿಯಲ್ಲಿ ಸನ್ನದ್ಧವಾಗಿದೆ. ಪ್ರವಾಸಿ ಮಂದಿರ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‌ವಾಡ್ ಕಾರ್ಯಕ್ರಮ ನಡೆಯಲಿರುವ ಸ್ಥಳಗಳ ಪರಿಶೀಲನೆ ನಡೆದಿದ್ದು, ಭದ್ರತಾ ಕಾರ್ಯಗಳನ್ನು ಪರಾಮರ್ಶಿಸಿದರು.