ವಿವಿಧೆಡೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ'  ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಉತ್ತಮ ವೇದಿಕೆ

ವಿವಿಧೆಡೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ'   ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಉತ್ತಮ ವೇದಿಕೆ

 


ವಿವಿಧೆಡೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' 

ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಉತ್ತಮ ವೇದಿಕೆ


ತುಮಕೂರು: ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ ಎಂದು ಶಿರಾ ಶಾಸಕ ಸಿ.ಎಂ. ರಾಜೇಶ್ ಗೌಡ ಅಭಿಪ್ರಾಯಪಟ್ಟರು. 


ಶಿರಾ ತಾಲ್ಲೂಕಿನ ಹುಣುಸೆಹಳ್ಳಿ ಗ್ರಾಮ ಪಂಚಾಯತಿ ಡ್ಯಾಗೇರಹಳ್ಳಿ ಗ್ರಾಮದಲ್ಲಿ ಶನಿವಾರ  ಹಮ್ಮಿಕೊಂಡಿದ್ದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಂದಾಯ, ಪಿಂಚಣಿ, ವಸತಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.


ಜಿಲ್ಲೆಯಲ್ಲಿ ಅತಿ ಹೆಚ್ಚು ಪಿಂಚಣಿ ನೀಡಿದ ತಾಲ್ಲೂಕುಗಳಲ್ಲಿ ಶಿರಾ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರಲ್ಲದೆ, ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸಿದ ಫಲವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ವೃದ್ಧಿಯಾಗಿದ್ದು ರೈತರಲ್ಲಿ ಸಂತಸ ಮೂಡಿದೆ ಎಂದ ಅವರು ಗಾಯಿತ್ರಿ ಜಲಾಶಯಕ್ಕೆ ಭದ್ರಾ ಮೆಲ್ದಂಡೆ ಯೋಜನೆಯಿಂದ ನೀರು ತಂದು ಸುಮಾರು 65 ಕೆರೆ ತುಂಬಿಸುವುದಕ್ಕೆ ಎಲ್ಲಾ ರೀತಿಯಿಂದಲೂ ಪ್ರಯತ್ನಿಸಲಾಗುವುದೆಂದು ಭರವಸೆ ನೀಡಿದರು.


ಇದೇ ವೇಳೆ ಕೇಂದ್ರ ಸರ್ಕಾರದ ಅಟಲ್ ಭೂಜಲ ಯೋಜನೆ ಕುರಿತು ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನೀರಿನ ಸಂರಕ್ಷಣೆ ಮತ್ತು ಸದ್ಬಳಕೆಯ ಬಗ್ಗೆ ಅರಿವನ್ನು ಬೆಳೆಸಿಕೊಳ್ಳಬೇಕು ಹಾಗೂ ಬಾವಿ, ಚೆಕ್ ಡ್ಯಾಂ, ಕೆರೆ-ಕಟ್ಟೆ ನಿರ್ಮಿಸುವುದರ ಮೂಲಕ ನೀರನ್ನು ಒಂದೆಡೆ ನಿಲ್ಲುವಂತೆ ಮಾಡಿ ಅಂತರ್ಜಲವನ್ನು ಹೆಚ್ಚಿಸುವುದರೊಂದಿಗೆ ತುಂತುರು ಹಾಗೂ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಜಲ ಮರುಪೂರಣವಾಗಿ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ತಿಳಿಸಿದರು.


ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಗ್ರಾಮೋದ್ಧಾರವೇ ದೇಶದ ಉದ್ಧಾರ ಎಂಬುದನ್ನು ಸರ್ಕಾರ ಮನಗಂಡು ಕಳೆದ ವರ್ಷದಿಂದ ಈ ಕಾರ್ಯಕ್ರಮವನ್ನು ಆರಂಭಿಸಿದೆ ಎಂದು ತಿಳಿಸಿದರು.


ತಹಶೀಲ್ದಾರ್ ಮಮತಾ ಎಂ. ಮಾತನಾಡಿ, ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪುನಾರಂಭಗೊAಡಿದ್ದು ಈ ಕಾರ್ಯಕ್ರಮದಡಿ ಗ್ರಾಮಸ್ಥರಿಗೆ ಸಲ್ಲಬೇಕಾದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಗ್ರಾಮದ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಒದಗಿಸುವ ಕೆಲಸವನ್ನು ತಾಲ್ಲೂಕು ಆಡಳಿತ ಮಾಡಲಿದೆ ಎಂದು ತಿಳಿಸಿದರು.


ನಾರು ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಬಿ.ಕೆ. ಮಂಜುನಾಥ್ ಹಾಗೂ ರೇಷ್ಮೆ ಅಭಿವೃದ್ಧಿ ಮಂಡಳಿಯ ಎಸ್.ಆರ್. ಗೌಡ ಮಾತನಾಡಿದರು.


 ಕಾರ್ಯಕ್ರಮದಲ್ಲಿ ಪಿಡಿಒ ವಿಜಯ್, ವಿಎಸ್‌ಎಸ್‌ಎನ್ ಅಧ್ಯಕ್ಷ ಶಶಿಧರ್, ಗ್ರಾಮ ಪಂಚಾಯತಿ ಅಧ್ಯಕ್ಷ ಹನುಮಂತರಾಯಪ್ಪ, ಉಪಾಧ್ಯಕ್ಷೆ ರೇಖಾ ತಿಪ್ಪೆಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡ ಚಂಗಾವರ ಮಾರಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.