ಮಹಿಳೆ, ಮಕ್ಕಳಿಗೆ ಕಾನೂನಿನ ಬಗ್ಗೆ ತಿಳಿಸಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್
Judge Raghavendra Shettigar

ಮಹಿಳೆ, ಮಕ್ಕಳಿಗೆ ಕಾನೂನಿನ ಬಗ್ಗೆ ತಿಳಿಸಬೇಕು:
ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್
ತುಮಕೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ೭೫ನೇ ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾ ಬಾಲಭವನದಲ್ಲಿ ಗುರುವಾರ ನಡೆದ ಪ್ಯಾನ್ ಇಂಡಿಯಾ ಕಾನೂನು ಅರಿವು ಅಭಿಯಾನ ಹಾಗೂ ಪೋಕ್ಸೋ ಕಾಯ್ದೆ, ಮಾನವ ಮಕ್ಕಳ ಅಕ್ರಮ ಸಾಗಣೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪುರಾತನ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಸ್ಥಾನಮಾನಗಳನ್ನು ನೀಡಿದ್ದರೂ, ಅವರ ಮೇಲೆ ದೌರ್ಜನ್ಯ ಪ್ರಕರಣಗಳು ಇನ್ನೂ ನಡೆಯುತ್ತಿವೆ. ದೌರ್ಜನ್ಯ ಪ್ರಕರಣಗಳ ನಿಯಂತ್ರಣಕ್ಕಾಗಿ ಕಾನೂನುಗಳನ್ನು ಜಾರಿಗೆ ತರಲಾಗಿದೆ. ದೌರ್ಜನ್ಯ ತಡೆ ಕಾನೂನಿನಲ್ಲಿ ಹಲವಾರು ತಿದ್ದುಪಡಿ ತಂದು ಮಹಿಳೆಯರ ಘನತೆಗೆ ಅಗೌರವ ತರುವ ಅಂಶಗಳನ್ನು ತೆಗೆದುಹಾಕಿ ಮಹಿಳೆಯರ ರಕ್ಷಣೆಗೆ ಕಾನೂನನ್ನು ಬಲಪಡಿಸಲಾಗಿದೆ. ಈ ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು, ದೌರ್ಜನ್ಯ ಪ್ರಕರಣಗಳು ನಡೆದಾಗ ಮಹಿಳೆಯರು ಧೈರ್ಯದಿಂದ ದೂರು ನೀಡಬೇಕು. ಮಹಿಳೆಯರ ರಕ್ಷಣೆಗಿರುವ ಈ ಕಾನೂನುಗಳ ಬಗ್ಗೆ ಹಾಗೂ ಧೈರ್ಯದಿಂದ ದೂರು ನೀಡುವ ನಿಟ್ಟಿನಲ್ಲಿ ಅರಿವು ಮೂಡಿಸಲು ಅಧಿಕಾರಿ ವರ್ಗ ಕಾರ್ಯಪ್ರವೃತ್ತರಾಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್. ಶ್ರೀಧರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಸಾಮಾಜಿಕ ಜವಾಬ್ದಾರಿಯ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಉಲ್ಲಂಘನೆ, ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರೂ ಕುಟುಂಬದ ಬಗ್ಗೆ ಕಾಳಜಿ ಹಾಗೂ ಜವಾಬ್ದಾರಿ ಬೆಳೆಸಿಕೊಂಡರೆ ಸಮಾಜ ತಾನಾಗಿಯೇ ಸ್ವಾಸ್ಥö್ಯವಾಗುತ್ತದೆ ಎಂದು ತಿಳಿಸಿದರು.
ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಮೂಲಕ ಬಾಲ್ಯವಿವಾಹ ಪದ್ಧತಿಯನ್ನು ತೊಡೆದು ಹಾಕಬೇಕು ಎಂದರಲ್ಲದೆ ವಿಶೇಷವಾಗಿ ಹೆಣ್ಣು ಮಕ್ಕಳು ಅನೀಮಿಯಾ ರೋಗಕ್ಕೆ ತುತ್ತಾಗುತ್ತಿದ್ದು, ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವಂತರಾಗಿಬೇಕೆAದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ, ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸುವುದು, ಅಶ್ಲೀಲ ಪದಬಳಕೆ ಮಾಡುವುದು, ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ನಡೆಸುವ ದೌರ್ಜನ್ಯ, ಪೋಷಕರು ಮಕ್ಕಳ ಮೇಲೆ ಮಾಡುವ ದೌರ್ಜನ್ಯ ಸೇರಿದಂತೆ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ದಾಖಲಾದಲ್ಲಿ ಅಂತಹವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಅವಕಾಶವಿದೆ ಎಂದರು.
ಕೋವಿಡ್‌ನಿAದಾಗಿ ತಂದೆಯನ್ನು ಕಳೆದುಕೊಂಡ ಮಕ್ಕಳು ಹಾಗೂ ಗಂಡನನ್ನು ಕಳೆದುಕೊಂಡ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆ. ಬಡವರು ಹಾಗೂ ನಿರ್ಗತಿಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ಒಡ್ಡಿ ಅನೈತಿಕ ಕೃತ್ಯಗಳಿಗೆ ಬಳಸಿಕೊಳ್ಳುವ ಪ್ರಕರಣಗಳೂ ಕಂಡು ಬರುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷೆಗೊಳಪಡಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಶಿವಕುಮಾರ, ಪವಿತ್ರಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್ ಇದ್ದರು.